ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಐಪಿಎಲ್ ಪಂದ್ಯಗಳಿಗೆ ಅವಕಾಶ ನೀಡುವ ಕುರಿತು ಬುಧವಾರ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಅದರ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಐಪಿಎಲ್ ಕ್ರಿಕೆಟ್ ಪಂದ್ಯಗಳ ಆಯೋಜನೆ ಸಂಬಂಧ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ನಿಯೋಗವು ಬುಧವಾರ ಸದಾಶಿವನಗರದಲ್ಲಿರುವ ಗೃಹ ಸಚಿವರ ನಿವಾಸದಲ್ಲಿ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, “ಪಂದ್ಯಗಳಿಗೆ ಅವಕಾಶ ನೀಡುವ ಬಗ್ಗೆ ಬುಧವಾರ ಅಧಿಕಾರಿಗಳ ಸಭೆ ಕರೆದಿದ್ದೇವೆ. ಅಲ್ಲಿ ಈ ವಿಷಯವನ್ನು ವಿವರವಾಗಿ ಚರ್ಚಿಸಲಾಗುತ್ತದೆ. ನಮ್ಮ ಶಿಫಾರಸುಗಳನ್ನು ಎಷ್ಟರಮಟ್ಟಿಗೆ ಪಾಲಿಸಲಾಗಿದೆ ಎಂಬುದನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಬೆಂಗಳೂರಿನಲ್ಲಿ ಪಂದ್ಯ ನಡೆಯಬೇಕೆಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಆದರೆ, ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಬೇಕಿದೆ. ಕಾಲ್ತುಳಿತದಂತಹ ಘಟನೆಗಳು ಮರುಕಳಿಸಬಾರದು. ಎಲ್ಲ ಅಂಶಗಳನ್ನು ಗಮನದಲ್ಲಿಟ್ಟು ನಿರ್ಧಾರ ಮಾಡುತ್ತೇವೆ” ಎಂದು ಹೇಳಿದರು.
ಇದೇ ವೇಳೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ಸಮಿತಿಯ ಶಿಫಾರಸುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಮಟ್ಟದಲ್ಲಿಯೂ ಜಿಬಿಎ ಹಾಗೂ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಯೂ ಹಲವು ಶಿಫಾರಸುಗಳನ್ನು ನೀಡಿದೆ ಎಂದರು.
“ಐಪಿಎಲ್ ಪಂದ್ಯಗಳು ಸಮೀಪಿಸುತ್ತಿದ್ದು, ಸರ್ಕಾರದ ಕಡೆಯಿಂದ ಅನುಮತಿ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಸಭೆ ಕರೆದಿದ್ದೇನೆ. ಸರ್ಕಾರದ ಹಂತದಲ್ಲಿ ಏನು ಕ್ರಮ ಕೈಗೊಳ್ಳಬೇಕು ಹಾಗೂ ಸಂಬಂಧಿಸಿದವರಿಗೆ ಯಾವ ರೀತಿಯ ಸೂಚನೆ ನೀಡಬೇಕು ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆಗೂ ಚರ್ಚಿಸಲಾಗುವುದು” ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.



