ಬೀದರ್: ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಂಠಾಳ ಗ್ರಾಮದ ಶರತ್ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸ್ಥಳದಲ್ಲಿ ಡೆತ್‌ನೋಟ್ ಸಿಕ್ಕಿದ್ದು, ಅದರಲ್ಲಿ “ಮಮ್ಮಿ Sorry… ಅಪ್ಪ I Love You… Keep Smile Forever” ಎಂದು ಬರೆದಿರುವುದು ಕಂಡುಬಂದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒತ್ತಡವೇ ಈ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಸಾವಿನ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಘಟನಾ ಸ್ಥಳಕ್ಕೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ವಿದ್ಯಾರ್ಥಿಯ ಸಾವಿನ ಹಿನ್ನೆಲೆಯಲ್ಲಿ ಕುಟುಂಬಸ್ಥರ ರೋದನ ವಸತಿ ಶಾಲೆಯ ವಾತಾವರಣವನ್ನು ಶೋಕಮಯಗೊಳಿಸಿದೆ. ಈ ಘಟನೆ ಪರೀಕ್ಷಾ ಒತ್ತಡ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದೆ.



