ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್.ಎಂ.ಡಿ.ಸಿ.ಯಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಣೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಈ ಕುರಿತು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ತ್ರಿಸದಸ್ಯ ತನಿಖಾ ತಂಡವನ್ನು ರಚಿಸಿ, 7 ದಿನಗಳ ಒಳಗಾಗಿ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.
ಅರಣ್ಯ ಪ್ರದೇಶದಿಂದ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಾಟವಾಗಿದೆಯೇ? ನಿಯಮಗಳ ಉಲ್ಲಂಘನೆ ನಡೆದಿದೆಯೇ? ಎಂಬುದನ್ನು ಸಮಗ್ರವಾಗಿ ಪರಿಶೀಲಿಸುವಂತೆ ಅವರು ಸ್ಪಷ್ಟಪಡಿಸಿದ್ದಾರೆ.
ಇದಲ್ಲದೆ, ಆರೋಪಿ ಲಾರಿ ಚಾಲಕ ನೀಡಿದ ಮಾಹಿತಿ ಆಧರಿಸಿ ಸುಮಾರು ಎರಡೂವರೆ ಸಾವಿರ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನೂ ಸಚಿವರು ಉಲ್ಲೇಖಿಸಿದ್ದಾರೆ.



