ಮೈಸೂರು:- ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಪತ್ತೆಹಚ್ಚಿ ಭರ್ಜರಿ ಕಾರ್ಯಾಚರಣೆ ನಡೆಸಿದೆ.
ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಅರುಣ್ ಕುಮಾರ್ ಮತ್ತು ಸ್ವಾಮಿ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ನ್ನು ವೆಂಕಟೇಶ್ವರ ವೇ ಬ್ರಿಡ್ಜ್ ಬಳಿ ಲಾಟರಿ ಮಾರಾಟ ಮಾಡುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದ್ದು, ಸ್ವಾಮಿಯನ್ನು ಸಿಂಚನ ಹೋಟೆಲ್ನಲ್ಲಿ ಬಂಧಿಸಲಾಗಿದೆ.
ಬಂಧಿತರಿಂದ ಒಟ್ಟು 78,130 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಅದರಲ್ಲಿ 55,200 ರೂ. ಮೌಲ್ಯದ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳು ಮತ್ತು 22,930 ರೂ. ನಗದು ಹಣ ಸೇರಿವೆ. ಮೈಸೂರು ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ಹಾಗೂ ಅಡಿಷನಲ್ ಎಸ್ಪಿ ಮಲ್ಲಿಕ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.



