ರಾಯಚೂರು: ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ರೀನ್ ಲೈನ್ಸ್ ಖಾಸಗಿ ಬಸ್ ಮತ್ತು ಕಾರಿನ ನಡುವೆ ಆಂಧ್ರಪ್ರದೇಶದ ಕರ್ನೂರು ಜಿಲ್ಲೆಯ ಆಲೂರು ಸಮೀಪ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಸಮಯಪ್ರಜ್ಞೆ ತೋರಿಸಿ ಬೆಂಕಿಯನ್ನು ಆರಿಸಿದ್ದಾರೆ.
ಸ್ವಲ್ಪ ಯಾಮಾರಿದ್ದರೆ ಬೆಂಕಿ ಬಸ್ಗೆ ತಗಲುವ ಸಾಧ್ಯತೆ ಇತ್ತು ಎನ್ನಲಾಗಿದೆ. ಘಟನೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಪ್ರಯಾಣಿಕರು ಸುಮಾರು ಎರಡು ಗಂಟೆಗಳ ಕಾಲ ಚಳಿಯಲ್ಲಿ ಒದ್ದಾಡಿದ ಸ್ಥಿತಿ ನಿರ್ಮಾಣವಾಯಿತು.
ಈ ಘಟನೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



