ಬೆಂಗಳೂರು: ಜುಲೈ 15ರಂದು ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಸಂಕಷ್ಟ ಹೆಚ್ಚಾಗಿದೆ.
ಜಾಗದ ವಿವಾದಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಹೆಸರು ಕೇಳಿಬಂದಿದ್ದು, ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಭೈರತಿ ಬಸವರಾಜ್ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸಿಐಡಿ ತಂಡ ಬೆಂಗಳೂರು ನಗರಾದ್ಯಂತ ಶೋಧ ಕಾರ್ಯ ನಡೆಸಿದೆ.
ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ನಡುವೆ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸುವ ಸಿದ್ಧತೆ ನಡೆಸುತ್ತಿದ್ದಾರೆ. ಸುಪ್ರೀಂ ಕೋರ್ಟ್ನಲ್ಲೂ ಜಾಮೀನು ಲಭಿಸದಿದ್ದಲ್ಲಿ, ಅವರು ಶರಣಾಗುವುದು ಅನಿವಾರ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.



