ಬೆಂಗಳೂರು:- ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಲಗೇಜ್ ತಪಾಸಣೆ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪ್ರಯಾಣಿಕನನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬಂದಿದ್ದ ಮತ್ತೊಬ್ಬ ಪ್ರಯಾಣಿಕ ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಅಡಗಿಸಿ ಮಾದಕ ವಸ್ತು ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಲಾಗಿದೆ. ಈ ವೇಳೆ ಸುಮಾರು 1.7 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು 4.7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.



