ಶಿವಮೊಗ್ಗ: ತಾಲೂಕಿನ ಗಾಜನೂರು ಗ್ರಾಮದಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬನನ್ನು ತಲೆಗೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ಶಿವಮೊಗ್ಗದ ಹೊಸಮನೆ ಬಡಾವಣೆ 6ನೇ ತಿರುವಿನ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ.
ಶ್ರೀನಿವಾಸ್ ಗಾರೆ ಕೆಲಸ ಮಾಡುತ್ತಿದ್ದನು. ಗಾಜನೂರಿನಲ್ಲಿ ಗಾರೆ ಕೆಲಸಕ್ಕೆ ಹೋಗಿದ್ದ ಆತ ಕಳೆದ ಮೂರು ದಿನಗಳಿಂದ ಅಲ್ಲಿಯೇ ವಾಸಿಸುತ್ತಿದ್ದನು. ಗುರುವಾರ ರಾತ್ರಿ ಗಾಜನೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಪಕ್ಕದಲ್ಲಿ ಇನ್ನೋರ್ವ ವ್ಯಕ್ತಿಯೊಂದಿಗೆ ಮದ್ಯಪಾನ ಮಾಡುತ್ತ ಕುಳಿತಿರುವುದನ್ನು ಸ್ಥಳೀಯರು ಕಂಡಿದ್ದಾರೆ.
ಯಾವ ಕಾರಣಕ್ಕೆ ಕೊಲೆ ನಡೆದಿದೆ ಹಾಗೂ ಆರೋಪಿಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಶ್ರೀನಿವಾಸ್ ಇರುವ ಕೆಲ ದೃಶ್ಯಗಳು ಸೆರೆಯಾಗಿವೆ.
ಆದರೆ ಅವನೊಂದಿಗೆ ಇದ್ದ ಇನ್ನೋರ್ವನ ಮುಖ ಸ್ಪಷ್ಟವಾಗಿ ಕಾಣಿಸದ ಹಿನ್ನೆಲೆಯಲ್ಲಿ, ಅವರು ಮದ್ಯ ತರಲು ತೆರಳಿದ್ದ ಬಾರ್ ಹಾಗೂ ಎಂಆರ್‌ಪಿ ಅಂಗಡಿಗಳ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಶ್ರೀನಿವಾಸ್ ಜೊತೆ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಜಗಳವಾಗಿ ನಂತರ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



