ಶಿವಮೊಗ್ಗ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಹಂಚಿಕೊಂಡ ಆರೋಪದಡಿ ಬಂಧನಕ್ಕೊಳಗಾಗಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ರಾಜೇಶ್ ಹಿರಿಮನೆ ಅವರನ್ನು 2026ರ ಫೆಬ್ರವರಿ 11ರಂದು ಹೊಸನಗರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು. ಫೆಬ್ರವರಿ 12ರಂದು ಹೊಸನಗರ ನ್ಯಾಯಿಕ ಪ್ರಥಮ ದರ್ಜೆ ದಂಡಾಧಿಕಾರಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ಅವರು ಒಂದು ದಿನ ನ್ಯಾಯಾಂಗ ಬಂಧನದಲ್ಲಿದ್ದು ನಂತರ ಬಿಡುಗಡೆಗೊಂಡಿದ್ದಾರೆ.
ರಾಜೇಶ್ ಹಿರಿಮನೆ ಅವರು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅವರು, ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗವನ್ನು ಪಾಕಿಸ್ತಾನ ಸೇನೆಯ ಅಧಿಕಾರಿಯೊಬ್ಬರ ಚಿತ್ರ ಜತೆ ಸಂಯೋಜಿಸಿ “ಒನ್ ಅಜೆಂಡಾ” ಎಂಬ ಸಾಲು ಸೇರಿಸಿ ಪ್ರಕಟಿಸಿದ್ದರು.
ಈ ಬರಹ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಗಮನಿಸಿದ ಹೊಸನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಕಲಂ 353(2) ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಮುಂದುವರಿದಿದೆ.



