ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ಸ್ಫೋಟಕ ಇರುವ ಬಗ್ಗೆ ಬೆದರಿಕೆ ಪತ್ರ ಪತ್ತೆಯಾಗಿದ್ದು ಪ್ರಯಾಣಿಕರಲ್ಲಿ ಭಾರೀ ಆತಂಕ ಉಂಟಾಗಿದೆ.
ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಘಾಲಯದ ಶಿಲ್ಲಾಂಗ್ ನಗರಕ್ಕೆ ತೆರಳಬೇಕಿದ್ದ ಇಂಡಿಗೋ ಸಂಸ್ಥೆಯ ವಿಮಾನ ಸಂಖ್ಯೆ 6ಇ–7304 ಬೆಳಿಗ್ಗೆ 9 ಗಂಟೆ 15 ನಿಮಿಷಕ್ಕೆ ಹೊರಡಲು ಸಿದ್ಧವಾಗಿತ್ತು.
ಈ ವೇಳೆ ಪ್ರಯಾಣಿಕರು ವಿಮಾನಕ್ಕೆ ಹತ್ತುತ್ತಿದ್ದ ಸಂದರ್ಭದಲ್ಲಿ, ವಿಮಾನದ ಶೌಚಾಲಯದಲ್ಲಿ ಒಂದು ಕಾಗದದ ಚೂರು ಪತ್ತೆಯಾಗಿದೆ. ಅದರಲ್ಲಿ ವಿಮಾನದೊಳಗೆ ಸ್ಫೋಟಕ ಇಡಲಾಗಿದೆ ಎಂದು ಬರೆಯಲಾಗಿತ್ತು. ಘಟನೆ ತಿಳಿಯುತ್ತಿದ್ದಂತೆಯೇ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು.
ಬಳಿಕ ವಿಮಾನವನ್ನು ಪ್ರತ್ಯೇಕ ನಿಲುಗಡೆ ಪ್ರದೇಶಕ್ಕೆ ಸ್ಥಳಾಂತರಿಸಿ ಸಂಪೂರ್ಣ ತಪಾಸಣೆ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದ ನಿರ್ದೇಶಕ ವಿಕ್ರಮ್ ಸಿಂಗ್ ಅವರ ಮಾಹಿತಿಯಂತೆ, ಪರಿಶೀಲನೆ ಪ್ರಕ್ರಿಯೆ ಮುಂದುವರಿದಿದ್ದು ಭದ್ರತೆಯನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ. ಪ್ರಕರಣ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.



