ಜೈಪುರ: ಭಿವಾಡಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಏಳು ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಂದು ಬೆಳಿಗ್ಗೆ ಸುಮಾರು 9:30ರ ವೇಳೆಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ವೇಳೆ 20ರಿಂದ 25 ಮಂದಿ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ವ್ಯಾಪಿಸಿತು. ಕೆಲ ಕಾರ್ಮಿಕರು ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತಾ ಮಿಶ್ರಾ ಮಾಹಿತಿ ನೀಡಿದ್ದು, ದಿನನಿತ್ಯದ ಪೊಲೀಸ್ ಗಸ್ತು ವೇಳೆ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ ಹಾಗೂ ವೈದ್ಯಕೀಯ ತಂಡ ಸ್ಥಳಕ್ಕೆ ದೌಡಾಯಿಸಿದೆ. ಸುಮಾರು ಒಂದೂವರೆ ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಿಜಾರಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್ ಸಿಂಗ್ ಸ್ಥಳದಲ್ಲಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಗ್ನಿ ಅವಘಡದ ಮೂಲ ಕಾರಣ ಪತ್ತೆಹಚ್ಚಲು ಜಿಲ್ಲಾಡಳಿತ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.



