HomeGadag Newsಲಂಬಾಣಿ ಸಮುದಾಯ ಸ್ವಾಭಿಮಾನದ ಸಂಕೇತ: ಸಚಿವ ಎಚ್.ಕೆ. ಪಾಟೀಲ

ಲಂಬಾಣಿ ಸಮುದಾಯ ಸ್ವಾಭಿಮಾನದ ಸಂಕೇತ: ಸಚಿವ ಎಚ್.ಕೆ. ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಜಾಗತಿಕ ಯುಗದಲ್ಲಿ ಶಿಕ್ಷಣ ಬಹು ಮುಖ್ಯವಾಗಿದ್ದು, ಲಂಬಾಣಿ ಜನಾಂಗ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದರ ಮೂಲಕ ಉತ್ತಮ ಸಮಾಜ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗುವಂತೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಕರೆ ನೀಡಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಕೃತಿ, ನಾಗರಿಕ ಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವುದನ್ನು ನಾವು ತಾಂಡಾಗಳಲ್ಲಿ ಕಾಣಬಹುದಾಗಿದೆ. ಲಂಬಾಣಿ ಸಮುದಾಯ ಬಹುದೊಡ್ಡ ಸಮುದಾಯ. ದೇಶದಲ್ಲಿ ಸುಮಾರು 12 ಕೋಟಿಯಷ್ಟು ಜನಸಂಖ್ಯೆ ಹೊಂದಿದೆ. ಜಿಲ್ಲೆಯಲ್ಲಿ ಅನೇಕ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿದೆ. ಇತ್ತೀಚೆಗೆ 19 ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿ ಹಕ್ಕುಪತ್ರ ವಿತರಿಸಲಾಗಿದೆ ಎಂದರು.

ಲಂಬಾಣಿ ಸಮುದಾಯವು ಇಂದಿಗೂ ಸಹ ತಮ್ಮ ಸಂಸ್ಕೃತಿಯನ್ನು ಬಿಟ್ಟುಕೊಡದೆ ಅದನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಸಂತಸದ ವಿಷಯವಾಗಿದ್ದು, ಇದಕ್ಕೆ ಸಂತ ಸೇವಾಲಾಲರು ಪ್ರೇರಣೆಯಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನಪ್ರಾತಿನಿಧ್ಯ ವ್ಯವಸ್ಥೆಯಡಿ ಲಂಬಾಣಿ ಸಮುದಾಯ ತಮ್ಮದೇ ಆದ ವ್ಯವಸ್ಥೆಯನ್ನು ಹೊಂದಿದೆ. ತಮ್ಮ ಸಮುದಾಯದ ಹಿರಿಯರಿಗೆ ನೀಡುವ ಗೌರವ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಲಂಬಾಣಿ ಸಮುದಾಯ ಕೊಟ್ಟ ಮಾತನ್ನು ಉಳಿಸಿಕೊಳ್ಳುವ, ಸ್ವಾಭಿಮಾನದ ಸಂಕೇತಕ್ಕೆ ಮಾದರಿಯಾದ ಸಮುದಾಯವಾಗಿದ್ದು, ಪ್ರತಿ ವರ್ಷವು ಇದೇ ರೀತಿ ಒಗ್ಗಟ್ಟಿನಿಂದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮವನ್ನು ಆಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಹಿರಿಯರಾದ ಶಿವಪ್ಪ ನಾಯಕ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ಬಾಬು ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ ಅಲಕೋಡ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಹರಿಲಾಲ ಪವಾರ ಸಂತ ಸೇವಾಲಾಲರ ಕುರಿತು ಉಪನ್ಯಾಸ ನೀಡಿ, ಮುಂಬರುವ ದಿನಗಳಲ್ಲಿ ಸಂತ ಸೇವಾಲಾಲರ ಜಯಂತಿಯನ್ನು ರಾಷ್ಟ್ರದ್ಯಂತ ಆಚರಿಸಲು ಹಾಗೂ ಲಂಬಾಣಿ ಸಮುದಾಯಕ್ಕೆ ಉತ್ತಮ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ವಲಸೆ ಹೋಗುವುದನ್ನು ತಪ್ಪಿಸಬಹುದಾಗಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!