ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ, ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 24 ಮಂದಿ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ, ಬೆಂಗಳೂರಿನಿಂದ ಗೋವಾ ಕಡೆ ತೆರಳುತ್ತಿದ್ದ ಎರಡು ಖಾಸಗಿ ಬಸ್ಗಳಿಗೆ ಡಿಕ್ಕಿಯಾಗಿದೆ. ಲಾರಿ ಮತ್ತು ಸಿಬರ್ಡ್ ಬಸ್ ಮುಖಾಮುಖಿಯಾಗಿ ಡಿಕ್ಕಿಯಾದ ನಂತರ, ಹಿಂಬದಿಯಿಂದ ಬರುತ್ತಿದ್ದ ಗಣೇಶ್ ಟ್ರಾವೆಲ್ಸ್ ಬಸ್ ಸಿಬರ್ಡ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಲಾರಿ ಪಲ್ಟಿಯಾಗಿದ್ದು, ಲಾರಿ ಚಾಲಕನ ಕಾಲಿಗೆ ಗಂಭೀರ ಗಾಯಗಳಾಗಿವೆ.
ಹಂಪಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ 12 ವಿದೇಶಿ ಪ್ರಯಾಣಿಕರು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಅಂಕೋಲ ಮತ್ತು ಕಾರವಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ನಂತರ ಪೊಲೀಸರು ಮತ್ತು ಸ್ಥಳೀಯರು ಸೇರಿ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಿಸಿದ್ದಾರೆ. ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



