ಚಿತ್ರದುರ್ಗ: ನೀರು ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗೇಟ್ ಸಮೀಪದ ಕಾತ್ರಾಳು ಕೆರೆಯ ಪ್ರದೇಶದಲ್ಲಿ ನಡೆದಿದೆ.
ರಸ್ತೆ ಬದಿಯ ಗಿಡಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ಟ್ಯಾಂಕರ್ಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಇಂಜಿನ್ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣವೇ ಲಾರಿಯಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆಯ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ವಾಹನ ಸಂಚಾರ ವ್ಯತ್ಯಯಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು.
ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಘಟನೆ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.



