ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಗುರುವಾರ ಶ್ರೀರಾಮ ಸೇನೆ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಅತ್ಯಂತ ವೈಭವದಿಂದ ಜರುಗಿತು. ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿಯ ಮೆರವಣಿಗೆಯು ಅವಳಿ ನಗರವನ್ನು ಕೇಸರಿಮಯವಾಗಿಸಿತ್ತು.
ಈ ಬಾರಿಯ ಮೆರವಣಿಗೆಯಲ್ಲಿ ಕೇವಲ ಶಿವಾಜಿ ಮಹಾರಾಜರಷ್ಟೇ ಅಲ್ಲದೆ, 17 ಅಡಿ ಎತ್ತರದ ಪ್ರಭು ಶ್ರೀರಾಮ, ಸಹಸ್ರಾರ್ಜುನ, ಮಹರ್ಷಿ ವಾಲ್ಮೀಕಿ, ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ, ಸಂತ ಸೇವಾಲಾಲ್ ಹಾಗೂ ಪಾಂಡುರಂಗ ವಿಠ್ಠಲನ ಮೂರ್ತಿಗಳು ಸಾರ್ವಜನಿಕರ ಗಮನ ಸೆಳೆದವು. ಈಚೆಗಷ್ಟೇ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದವರ ಭಾವಚಿತ್ರಗಳು ಮೆರವಣಿಗೆಗೆ ಮೆರುಗು ನೀಡಿದವು. ಅಲ್ಲದೇ ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಕೇಸರಿ ಧ್ವಜ ಹಾಗೂ ಬಂಟಿಂಗ್‌ಗಳನ್ನು ಕಟ್ಟುವ ಮೂಲಕ ಸಂಘಟಕರು ಹಬ್ಬದ ವಾತಾವರಣ ನಿರ್ಮಿಸಿದ್ದರು.
ಮೆರವಣಿಗೆಯಲ್ಲಿ ಗದಗ ಮಾತ್ರವಲ್ಲದೆ ಹುಬ್ಬಳ್ಳಿ, ಬಾಗಲಕೋಟೆ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಿಂದ ಹಿಂದೂ ಸಂಘಟನೆಗಳು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಕೊರಳಲ್ಲಿ ಕೇಸರಿ ಶಾಲು, ಹಣೆಯಲ್ಲಿ ಕುಂಕುಮ ಧರಿಸಿದ್ದ ಯುವಕರು ಕಿವಿಗಡಚಿಕ್ಕುವ ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದರು. ಮೆರವಣಿಗೆಯುದ್ದಕ್ಕೂ ‘ಜೈ ಶಿವಾಜಿ’, ‘ಜೈ ಶ್ರೀರಾಮ್’ ಎಂಬ ಘೋಷಣೆಗಳು ಮೊಳಗಿದವು. ಮೆರವಣಿಗೆ ಸಾಗುವ ದಾರಿಯಲ್ಲಿ ವಿವಿಧ ಸಂಘಟನೆಗಳಿಂದ ಸಾರ್ವಜನಿಕರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಶಿವಾಜಿ ಜಯಂತಿ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಸಂಜೆಯವರೆಗೂ ಸಾಗಿದ ಮೆರವಣಿಗೆಯು, ಮುನ್ಸಿಪಲ್ ಮೈದಾನದಲ್ಲಿ ಶಾಂತಿಯುತವಾಗಿ ಮುಕ್ತಾಯಗೊಂಡಿತು.
ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದಲ್ಲಿ ಶಿವಾಜಿ ಮಹಾರಾಜರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಅಲ್ಲಿಂದ ಆರಂಭಗೊಂಡ ಮೆರವಣಿಗೆಯು ಜುಮ್ಮಾ ಮಸೀದಿ, ಬಸವೇಶ್ವರ ವೃತ್ತ, ಹುಯಿಲಗೋಳ ನಾರಾಯಣರಾವ್ ವೃತ್ತದ ಮಾರ್ಗವಾಗಿ ಮುನ್ಸಿಪಲ್ ಕಾಲೇಜು ಮೈದಾನದವರೆಗೆ ಸಾಗಿತು. ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಕಟ್ಟಡಗಳ ಮೇಲೇರಿ ಸಾವಿರಾರು ಜನರು ಈ ಭವ್ಯ ಮೆರವಣಿಗೆಯನ್ನು ಕಣ್ತುಂಬಿಕೊಂಡರು.



