ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲರ ಅಧ್ಯಕ್ಷತೆಯಲ್ಲಿ ಫೆ. 27ರಂದು ಜಿಲ್ಲಾ ಮಟ್ಟದ ಜನತಾ ದರ್ಶನ ನಡೆಯಲಿದೆ. ಆದರೆ ಇದು ಕಾಟಾಚಾರದ ಜನತಾ ದರ್ಶನ ಆಗದೆ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಸಭೆಯಾಗಲಿ ಎಂದು ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಆಶಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 2024ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ನೀಡಿದ ಮನವಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಈ ಬಾರಿ ನಡೆಯುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು ಯಾವ ರೀತಿ ಕಾನೂನಿಗೆ ಗೌರವ ನೀಡುತ್ತಾರೆಂದು ಕಾದು ನೋಡಬೇಕಿದೆ ಎಂದು ಹೇಳಿಕೆ ನೀಡಿದ್ದಾರೆ.



