ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇರುವ ಎರಡು ಪ್ರಮುಖ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಬಂದಿದೆ. ಧೌಲಾ ಕುವಾನ್‌ನ ಆರ್ಮಿ ಪಬ್ಲಿಕ್ ಸ್ಕೂಲ್ ಹಾಗೂ ಲೋಧಿ ರಸ್ತೆಯ ಏರ್ ಫೋರ್ಸ್ ಬಾಲ್ ಭಾರತಿ ಸ್ಕೂಲ್ ಗಳಿಗೆ ಸ್ಫೋಟ ಬೆದರಿಕೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆದರಿಕೆ ಇ-ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡೂ ಶಾಲೆಗಳನ್ನು ತಕ್ಷಣವೇ ಖಾಲಿ ಮಾಡಿಸಲಾಯಿತು. ಬಳಿಕ ಪೊಲೀಸ್, ಬಾಂಬ್ ನಿಷ್ಕ್ರಿಯಗೊಳಿಸುವ ದಳ, ಡಾಗ್ ಸ್ಕ್ವಾಡ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಶಾಲಾ ಆವರಣದ ಸಂಪೂರ್ಣ ಪರಿಶೀಲನೆ ನಡೆಸಿದರು.
12ನೇ ತರಗತಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ನಾಲ್ಕು ದಿನಗಳ ಅಂತರದಲ್ಲಿ ಇದು ಎರಡನೇ ಬೆದರಿಕೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಸಂಶಯಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಭದ್ರತಾ ಕಾರಣಗಳಿಂದ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಎರಡೂ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಧಮಕಿ ಬಂದಿರುವುದನ್ನು ದೃಢಪಡಿಸಿದರು. ಸೈಬರ್ ಸೆಲ್ ಸಹಾಯದಿಂದ ಇ-ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ.



