ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಶಾಲಾ ಬಾಲಕನ ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ, ಶಾಲಾ ವಿದ್ಯಾರ್ಥಿಯನ್ನು ಥಳಿಸಿ ಹತ್ಯೆಗೈದಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವುದರ ಜೊತೆಗೆ, ಈ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆ ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು. ಬಾಲಕನ ಸಾವಿಗೆ ನ್ಯಾಯ ಒದಗಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಭರವಸೆ ನೀಡಿದ್ದಾರೆ.
ಹತ್ಯೆಯಲ್ಲಿ ಭಾಗಿಯಾದವರು ಅಪ್ರಾಪ್ತ ವಯಸ್ಸಿನ ಹುಡುಗರಾಗಿದ್ದಾರೆ ಎಂಬ ಮಾಹಿತಿ ತೀವ್ರ ಆಘಾತ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ. ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಬೇಕಾದ ಮಕ್ಕಳು ದುಶ್ಚಟಗಳಿಗೆ ಒಳಗಾಗಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುತ್ತಿರುವುದು ದುರದೃಷ್ಟಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಏನೇ ಇರಲಿ, ಅಪರಾಧ ಎಸಗಿದವರು ಯಾರೇ ಆಗಿರಲಿ, ಕಾನೂನಿನ ಮೂಲಕ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಬಾಲ್ಯದಲ್ಲೇ ದ್ವೇಷ, ಹಿಂಸೆ ಮತ್ತು ಅಪರಾಧ ಪ್ರವೃತ್ತಿ ಬೆಳೆಸಿಕೊಳ್ಳುವುದು ಸಮಾಜಕ್ಕೆ ಅತ್ಯಂತ ಅಪಾಯಕಾರಿ ಎಂದು ಎಚ್ಚರಿಕೆ ನೀಡಿದ ಅವರು, ಪೋಷಕರು ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಎಂದಿದ್ದಾರೆ. ಮಕ್ಕಳು ತಪ್ಪು ಹಾದಿ ಹಿಡಿದರೆ ತಕ್ಷಣ ತಿದ್ದಿ ಬುದ್ದಿ ಹೇಳುವ ಜವಾಬ್ದಾರಿ ಪೋಷಕರದ್ದು ಎಂದು ಹೇಳಿದ್ದಾರೆ. ಅಲ್ಲದೆ ಶಾಲೆಗಳ ಸುತ್ತಮುತ್ತ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಆಡಳಿತ ಮಂಡಳಿಗಳು ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು, ಅಗತ್ಯವಿದ್ದರೆ ಪೊಲೀಸ್ ನೆರವು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.
ಮಗನನ್ನು ಕಳೆದುಕೊಂಡ ದುಃಖದಲ್ಲಿರುವ ಕುಟುಂಬವನ್ನು ಸಾಂತ್ವನಪಡಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ಮೃತ ಬಾಲಕನ ಪೋಷಕರಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಈ ದುಷ್ಕೃತ್ಯದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆ ದೊರಕುವಂತೆ ನೋಡಿಕೊಳ್ಳಲಾಗುವುದು ಎಂಬ ಭರವಸೆಯನ್ನು ಆ ನೊಂದ ಕುಟುಂಬಕ್ಕೆ ನೀಡಿರುವುದಾಗಿ ತಿಳಿಸಿದ್ದಾರೆ.
ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ ಮತ್ತು ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದ ಅವರು, ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.



