ಕೊಪ್ಪಳ: ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವುದು ಬಹಿರಂಗವಾಗಿದ್ದು, ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.
ದೂರಿನ ಪ್ರಕಾರ, ಆರೋಪಿಯು ಮದುವೆಯ ಆಮಿಷವೊಡ್ಡಿ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ತಿಳಿಸಲಾಗಿದೆ. ಫೆಬ್ರವರಿ 19ರಂದು ಬಾಲಕಿಗೆ ರಕ್ತಸ್ರಾವವಾಗಿದ್ದ ಹಿನ್ನೆಲೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಬಹಿರಂಗವಾದ ಬಳಿಕ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯವನ್ನು ಮುಚ್ಚಿಡಲು ಯತ್ನಿಸಿದ್ದರೆಂಬ ಆರೋಪದ ಹಿನ್ನೆಲೆ ವಸತಿಶಾಲೆಯ ಪ್ರಾಂಶುಪಾಲರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ. ಪ್ರಾಂಶುಪಾಲರ ಅಮಾನತಿಗೆ ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ. ವಸತಿಶಾಲೆಗಳ ಮೇಲ್ವಿಚಾರಣೆ ಹಾಗೂ ಅಪ್ರಾಪ್ತೆಯರ ಸುರಕ್ಷತೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬ ಸಾರ್ವಜನಿಕ ಒತ್ತಾಯವೂ ಕೇಳಿಬರುತ್ತಿದೆ.
ಗಮನಾರ್ಹವಾಗಿ, ಕಳೆದ ನವೆಂಬರ್‌ನಲ್ಲಿ ಕೂಡ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿನಿಲಯದಲ್ಲಿ ಅಪ್ರಾಪ್ತ ಬಾಲಕಿಗೆ ಹೆರಿಗೆಯಾದ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅದನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಅಂಥದ್ದೇ ಘಟನೆ ಮರುಕಳಿಸಿರುವುದು ಆತಂಕ ಮೂಡಿಸಿದೆ.



