ಬಾಗಲಕೋಟೆ: ಜಿಲ್ಲೆಯಲ್ಲಿನ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಘಟನೆಯ ವಿವರ
ಫೆಬ್ರವರಿ 19ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮೆರವಣಿಗೆಯ ಮೇಲೆ ಚಪ್ಪಲಿ ಎಸೆದು ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಶ್ರೀರಾಮುಲು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ ಎಂದು ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ. ಸತ್ಯಾಸತ್ಯತೆ ಹೊರಬರಲು ಎನ್ಐಎ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಘಟನೆಗಳ ಮಾದರಿಯಲ್ಲೇ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆಗಳ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಅವರು, ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಂತಿ ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಇದರ ನಡುವೆ ಕೆಲ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ವಿಡಿಯೋ ಹಂಚಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. “15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ” ಎಂಬ ಅರ್ಥದ ಹೇಳಿಕೆ ಪೋಸ್ಟ್ನಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.



