ಯಾದಗಿರಿ: ಜಿಲ್ಲೆಯಲ್ಲಿ ಧಾರ್ಮಿಕ ವಲಯಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಘಟನೆ ಬೆಳಕಿಗೆ ಬಂದಿದೆ. ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣದ ಬಳಿಕ ಮುತ್ಯಾ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಹರಿದಾಡುತ್ತಿದೆ.
ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮಠದಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ಆರೋಪಿಗೆ ಶೀಘ್ರದಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮುತ್ಯಾ ಬೆಂಬಲಿಗರು, ವಿಡಿಯೋವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಹೇಳಿದ್ದು, ಮಲ್ಲಿಕಾರ್ಜುನ ಮುತ್ಯಾ ಎಲ್ಲೂ ಪರಾರಿ ಆಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಸ್ಪಷ್ಟಪಡಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ.



