ಬೆಂಗಳೂರು: ನಗರದಲ್ಲಿ ನಡೆದ ರೌಡಿಶೀಟರ್ ಪವನ್ ಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ರಂಜನ್‌ನ್ನು ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಸಂಪಿಗೆಹಳ್ಳಿ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಘಟನೆ ನಡೆದಿದೆ.
ಬಾಗಲೂರು ಸಮೀಪದ ನಿರ್ಜನ ಪ್ರದೇಶದಲ್ಲಿ ಅಡಗಿದ್ದ ರಂಜನ್‌ನನ್ನು ಬಂಧಿಸಲು ಇಂದು ಬೆಳಗ್ಗೆ ಸಂಪಿಗೆಹಳ್ಳಿ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಮಾರಕಾಸ್ತ್ರ ಬಳಸಿ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.
ತಕ್ಷಣ ಎಚ್ಚೆತ್ತ ಇನ್ಸ್ಪೆಕ್ಟರ್ ವೆಂಕಟೇಶ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ರಂಜನ್‌ನನ್ನು ಕೂಡಲೇ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 25ರಂದು ರಾತ್ರಿ ಥಣಿಸಂದ್ರ ಸಮೀಪದ ಅಮರಜ್ಯೋತಿ ಲೇಔಟ್‌ನಲ್ಲಿ 28 ವರ್ಷದ ಪವನ್ ಕುಮಾರ್ ಅವರನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಲಾಗಿತ್ತು. ಹೆಲ್ಮೆಟ್ ಧರಿಸಿ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಆರು ಮಂದಿ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದರು.
ಪವನ್ ಕುಮಾರ್ ಡಿ.ಜೆ ಹಳ್ಳಿ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಮೂರು ವರ್ಷಗಳ ಹಿಂದೆ ನಡೆದಿದ್ದ ರೌಡಿಶೀಟರ್ ಕಪಿಲ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ. ಕಳೆದ ಮೇ ತಿಂಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ, ಒಂದೂವರೆ ತಿಂಗಳ ಹಿಂದಷ್ಟೇ ಬೇಕರಿ ಆರಂಭಿಸಿದ್ದನು.
ಕಪಿಲ್ ಹತ್ಯೆಯ ಮಾದರಿಯಲ್ಲೇ ಹೆಲ್ಮೆಟ್ ಧರಿಸಿದ್ದ ತಂಡ ಪವನ್ ಕುಮಾರ್‌ನನ್ನೂ ಹತ್ಯೆ ಮಾಡಿರುವುದು ಗಮನಾರ್ಹವಾಗಿದೆ. ಹಳೆಯ ವೈಷಮ್ಯವೇ ಈ ಹತ್ಯೆಗೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.



