ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ದೇವಸ್ಥಾನ ಮತ್ತು ಬಾಳೆಬರೆ ಫಾಲ್ಸ್ ನಡುವಿನ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ.
ಕುಂದಾಪುರದಿಂದ ಶಿವಮೊಗ್ಗದತ್ತ ಸಾಗುತ್ತಿದ್ದ ದುರ್ಗಾಂಬಾ ಖಾಸಗಿ ಬಸ್‌ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ, ಬಸ್ಸಿನಲ್ಲಿದ್ದ 38 ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಆದರೆ ಬೆಂಕಿ ಕ್ಷಿಪ್ರವಾಗಿ ಹಬ್ಬಿದ ಪರಿಣಾಮ ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಈ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್‌ಗೆ ಬೆಂಕಿ ತಗುಲಿದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ಮುಂದುವರಿದಿದೆ.



