ನವದೆಹಲಿ: ಇರಾನ್–ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಬಂಧಿತ ದೇಶಗಳಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಉನ್ನತಾಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದರು. ಜಗತ್ತಿನ ಎಲ್ಲೆಡೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಅವರನ್ನು ಸುರಕ್ಷಿತವಾಗಿ ಮರಳಿ ಕರೆತಂದಿರುವುದು ಉದಾಹರಣೆಗಳೊಂದಿಗೆ ಸಾಬೀತಾಗಿದೆ. ಹಿಂದೆ ಉಕ್ರೇನ್ನಲ್ಲಿ ಯುದ್ಧದ ವೇಳೆ ಸಿಲುಕಿದ್ದ ಭಾರತೀಯರನ್ನು ಸುರಕ್ಷಿತವಾಗಿ ವಾಪಸು ಕರೆತಂದಿದ್ದೇವೆ ಎಂದು ಅವರು ನೆನಪಿಸಿದರು.
ಇರಾನ್–ಇಸ್ರೇಲ್ ಸಂಘರ್ಷ ತೀವ್ರಗೊಂಡ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ, ವಿಶೇಷವಾಗಿ ದುಬೈನಲ್ಲಿ ಕನ್ನಡಿಗರು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಹಿರಿಯ ಸಚಿವರೊಂದಿಗೆ ತುರ್ತು ಚರ್ಚೆ ನಡೆಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
“ಕನ್ನಡಿಗರಷ್ಟೇ ಅಲ್ಲ, ಎಲ್ಲ ಭಾರತೀಯರ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಯಾರೂ ಆತಂಕ ಪಡಬೇಕಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ,” ಎಂದು ಸಚಿವರು ಆತಂಕಿತ ಕುಟುಂಬಗಳಿಗೆ ಭರವಸೆ ನೀಡಿದರು.
ಯುದ್ಧಪೀಡಿತ ಪ್ರದೇಶಗಳಲ್ಲಿ ವಿಮಾನ ಸಂಚಾರ ಅಪಾಯಕಾರಿ ಆಗಿರುವುದರಿಂದ ತಜ್ಞರ ಸಲಹೆ ಪಡೆಯಲಾಗುತ್ತಿದೆ. ಸದ್ಯ ದುಬೈನಿಂದ ವಿಮಾನ ಹಾರಾಟ ಸ್ಥಗಿತಗೊಂಡಿದ್ದು, ಅಲ್ಲಿರುವವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಗಂಭೀರ ಪ್ರಯತ್ನಗಳು ನಡೆಯುತ್ತಿವೆ ಎಂದು ಜೋಶಿ ತಿಳಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ಭೋಜೇಗೌಡರು ಸೇರಿದಂತೆ ಸಂಕಷ್ಟದಲ್ಲಿರುವ ಎಲ್ಲ ಕನ್ನಡಿಗರ ರಕ್ಷಣೆಗೆ ಸರ್ಕಾರ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.



