ಬೀದರ್: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ನಡೆದಿದೆ.
ಬಾಜೋಳಗಾ ಗ್ರಾಮದ ನಿವಾಸಿ ಶೋಹಮ್ (13) ಮೃತ ಬಾಲಕನಾಗಿದ್ದಾನೆ. ಬಾಜೋಳಗಾ ಕ್ರಾಸ್‌ನಿಂದ ಡಿಸೇಲ್ ತುಂಬಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮೃತ ಬಾಲಕ ಟ್ರ್ಯಾಕ್ಟರ್‌ನಲ್ಲಿ ಕುಳಿತಿದ್ದಾಗ ಮದಕಟ್ಟಿ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮವಾಗಿ ಬಾಲಕ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



