ಅಹಮದಾಬಾದ್: ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದರು.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ಸಂಜು ಸ್ಯಾಮ್ಸನ್ 89 ರನ್, ಅಭಿಷೇಕ್ ಶರ್ಮಾ 52 ರನ್ ಹಾಗೂ ಇಶಾನ್ ಕಿಶನ್ 54 ರನ್ ಗಳಿಸಿ ಉತ್ತಮ ಪ್ರದರ್ಶನ ನೀಡಿದರು. ಈ ಮೂರು ಅರ್ಧಶತಕಗಳ ನೆರವಿನಿಂದ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು.
256 ರನ್‌ಗಳ ಭಾರಿ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡ ಆರಂಭದಲ್ಲೇ ಕುಸಿತ ಕಂಡಿತು. 72 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡ ಕಿವೀಸ್ ತಂಡವನ್ನು ಭಾರತೀಯ ಬೌಲರ್‌ಗಳು ಸಂಪೂರ್ಣವಾಗಿ ಹಿಡಿತದಲ್ಲಿಟ್ಟರು. ಜಸ್‌ಪ್ರೀತ್ ಬುಮ್ರಾ 4 ವಿಕೆಟ್ ಪಡೆದು ಮಾರಕ ದಾಳಿ ನಡೆಸಿದರು. ಅಂತಿಮವಾಗಿ ನ್ಯೂಜಿಲೆಂಡ್ ತಂಡ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು.
ಈ ಮೂಲಕ ಭಾರತ ತಂಡ 96 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ಟಿ20 ವಿಶ್ವಕಪ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಭಾರತದ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, “ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು.
ಈ ಗೆಲುವು ತಂಡದ ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಹಾಗೂ ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ. ಈ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತಂದಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.



