ನವದೆಹಲಿ: ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಶಾಂತಿ, ಸಂವಾದ ಮತ್ತು ರಾಜತಾಂತ್ರಿಕತೆಯ ನಿಲುವನ್ನು ಪ್ರತಿಪಾದಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಸದ್ಯದ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಸಂದರ್ಭದಲ್ಲಿ ವಿದೇಶಗಳಲ್ಲಿ ಇರುವ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಭಾರತೀಯ ಸಮುದಾಯದ ಯೋಗಕ್ಷೇಮ ಮತ್ತು ಸುರಕ್ಷತೆ ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಮಧ್ಯ ಪ್ರಾಚ್ಯದಲ್ಲಿನ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ. ಸಂಬಂಧಿತ ಸಚಿವಾಲಯಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಪರಸ್ಪರ ಸಮನ್ವಯ ಸಾಧಿಸುತ್ತಿವೆ ಎಂದು ಜೈಶಂಕರ್ ಹೇಳಿದರು.
ಇರಾನ್–ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮವಾಗಿ ತೈಲ ಬೆಲೆ ಏರಿಕೆಯಾಗಿದೆ. ಈ ಬಗ್ಗೆ ಮಾತನಾಡಿದ ಅವರು, ಇಂಧನ ಮಾರುಕಟ್ಟೆಯ ಲಭ್ಯತೆ, ವೆಚ್ಚ ಮತ್ತು ಅಪಾಯಗಳನ್ನು ಗಮನದಲ್ಲಿಟ್ಟುಕೊಂಡು ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಸ್ಥಿರತೆ ಇರಬೇಕು ಎಂಬುದು ಭಾರತದ ಸ್ಪಷ್ಟ ಗುರಿಯಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಸುಮಾರು ಒಂದು ಕೋಟಿ ಭಾರತೀಯರು ವಾಸಿಸಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಇರಾನ್‌ನಲ್ಲಿಯೂ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಸಾವಿರಾರು ಭಾರತೀಯರು ನೆಲೆಸಿದ್ದಾರೆ ಎಂದು ಹೇಳಿದರು.



