ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೋಮವಾರ ವಿಧಾನಪರಿಷತ್‌ನಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ಇರುವುದನ್ನು ಒಪ್ಪಿಕೊಂಡರು.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೂ ಪ್ರಾಥಮಿಕ ಶಾಲೆಗಳಲ್ಲಿ 34,027 ಮತ್ತು ಪ್ರೌಢ ಶಾಲೆಗಳಲ್ಲಿ 9,499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ನಗರ ಜಿಲ್ಲೆಯಲ್ಲಿ ಮೂಲಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆಗಳು ಮುಚ್ಚಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಒಟ್ಟು 1,462 ಸರ್ಕಾರಿ ಶಾಲೆಗಳಿದ್ದು, ಸುಮಾರು 2.24 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೇಳಿದರು.
ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯ ಕೊರತೆಯಿಂದ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.



