ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಈ ಅಪಘಾತವು ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಬಂಗಾರುಪಾಳ್ಯಂ ಸಮೀಪದ ಪಲಮಕುಲಪಲ್ಲಿ ಬಳಿ ಸಂಭವಿಸಿದೆ. ಬೆಂಗಳೂರು ಮೂಲದ ದಂಪತಿ ಮತ್ತು ಅವರ 4 ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಲಮನೇರಿನಿಂದ ಚಿತ್ತೂರಿನತ್ತ ಬರುತ್ತಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ದಂಪತಿ ಹಾಗೂ ಮಗು ಕಾರಿನಲ್ಲೇ ಸಿಲುಕಿ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಕಾರು ಬಸ್‌ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದು, ಪೊಲೀಸರು ಜೆಸಿಬಿ ಸಹಾಯದಿಂದ ಹೊರತೆಗೆದಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಮೃತಪಟ್ಟ ಕುಟುಂಬವು ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿಯಲ್ಲಿ ದರ್ಶನಕ್ಕೆ ಟಿಕೆಟ್ ಪಡೆದಿತ್ತು ಎನ್ನಲಾಗಿದೆ. ಪೊಲೀಸರು ಮೃತರ ವಿವರಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.



