ಹಾಸನ: ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಿಂದ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಗಾಯಗೊಂಡ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ. ಅಬ್ಬೂರು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಖಾಲಿಯಾಗಿದ್ದರಿಂದ ಹೊಸ ಸಿಲಿಂಡರ್ ಅಳವಡಿಸಲು ಮುಂದಾದಾಗ ಈ ಅವಘಡ ಸಂಭವಿಸಿದೆ. ಗ್ಯಾಸ್ ತುಂಬಿದ್ದ ಸಿಲಿಂಡರ್ಗೆ ರೆಗ್ಯುಲೇಟರ್ ಜೋಡಿಸುವ ವೇಳೆ ಅನಿಲ ಸೋರಿಕೆಯಾಗಿ ಏಕಾಏಕಿ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ಮಹಿಳೆ ಹಾಗೂ ಪುತ್ರ ಸೇರಿ ಮನೆಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಕೊಣನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಂದರೇಶ್ ಅವರ ಮನೆಯಲ್ಲಿ ನಡೆದ ಈ ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೊಳಗಾಗಿವೆ.
ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



