ಉಡುಪಿ: ಮದುವೆಯಾಗಿ ಕೇವಲ ಒಂದೇ ತಿಂಗಳಲ್ಲಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.
ಮೂಲತಃ ನೆಲ್ಯಾಡಿ ನಿವಾಸಿಯಾದ ಸುದೀಪ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಳೆದ ಫೆಬ್ರವರಿ 17ರಂದು ಪುತ್ತೂರಿನಲ್ಲಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದ ಸುದೀಪ್ ಶೆಟ್ಟಿ, ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆಯಾದರೂ, ಹತ್ತಾರು ದಿನಗಳ ಜೀವ-ಮರಣ ಹೋರಾಟದ ಬಳಿಕ ಮಾರ್ಚ್ 29ರಂದು ಅವರು ಕೊನೆಯುಸಿರೆಳೆದಿದ್ದಾರೆ.
ಈ ಪ್ರಕರಣದಲ್ಲಿ ಸುದೀಪ್ ತಂದೆ ದಾಮೋದರ್ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸುದೀಪ್ ಪತ್ನಿ ಸೌಮ್ಯ ಶೆಟ್ಟಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಆರೋಪಿಸಿದ್ದಾರೆ. ಸುದೀಪ್ ಹಾಗೂ ಸೌಮ್ಯ ನಡುವೆ ನಡೆದ ವಿವಾಹಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ, ಮದುವೆಯ ಬಳಿಕವೇ ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು ಎನ್ನಲಾಗಿದೆ.
ಮಾರ್ಚ್ 17ರಂದು ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಇದ್ದ ಸುದೀಪ್ ಬಳಿ ಸೌಮ್ಯ ಹೋಗಿ ಬೆದರಿಕೆ ಹಾಕಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ. ಬಳಿಕ ಮಾರ್ಚ್ 22ರಂದು ವಿಷ ಸೇವಿಸಿದ ವಿಷಯ ತಿಳಿದುಬಂದಿದ್ದು, ಮೊದಲಿಗೆ ನಿಟ್ಟೆಯ ಗಜಾರಿಯ ಆಸ್ಪತ್ರೆಗೆ ಸೇರಿಸಿ ನಂತರ ಉಡುಪಿ ಹಾಗೂ ಮಂಗಳೂರು ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆ ನೀಡಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುದೀಪ್ ಸಾವನ್ನಪ್ಪಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾರ್ಕಳ ನಗರ ಪೊಲೀಸರು ತಿಳಿಸಿದ್ದಾರೆ.



