ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಉಷ್ಣತೆಯ ತೀವ್ರತೆ ಕಡಿಮೆಯಾದಂತಾಗಿದೆ.
ಇಂದೂ ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರ್ಗಿ, ಬೀದರ್, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಉಳಿದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



