ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯ ಹೊತ್ತಲ್ಲೇ ಭಾರತೀಯ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವರಾದ ಕಿರಣ್ ರಿಜಿಜು ಹಾಗೂ ಸುಕಾಂತ ಮಜುಂದಾರ್ ಸಮ್ಮುಖದಲ್ಲಿ ಪೇಸ್ ಬಿಜೆಪಿ ಸೇರಿದರು. ಪಕ್ಷದ ಹಿರಿಯ ನಾಯಕರ ಸಾನ್ನಿಧ್ಯದಲ್ಲಿ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.
ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನಬಿನ್ ಅವರನ್ನು ಪೇಸ್ ಭೇಟಿ ಮಾಡಿದ್ದರು. ರಾಜಕೀಯ ಪೇಸ್ ಅವರಿಗೆ ಹೊಸದಲ್ಲ. 2021ರಲ್ಲಿ ತೃಣಮೂಲ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದ ಅವರು, 2022ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪರವಾಗಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದರು. ಆದರೆ, ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿರಲಿಲ್ಲ.
ಮುಂದಿನ ಚುನಾವಣೆಯಲ್ಲಿ ಪೇಸ್ ಸ್ಪರ್ಧಿಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.
ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಲಿಯಾಂಡರ್ ಪೇಸ್ ಅವರ ಬಿಜೆಪಿ ಪ್ರವೇಶ ಐತಿಹಾಸಿಕ ಬೆಳವಣಿಗೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಹಲವು ವರ್ಷಗಳಿಂದ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.



