ಬೆಂಗಳೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಕಚೇರಿಯ ರಿಜಿಸ್ಟ್ರಾರ್ ಡಾ. ಮಲ್ಲುರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಗಾಂಧಿನಗರದಲ್ಲಿರುವ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರು, ಡಾ. ಮಲ್ಲು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಾರ್ಚ್ 26ರಂದು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಸಂಬಂಧ ಆರೋಪಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನಂತರ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್., ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.



