ಕೊಪ್ಪಳ: ಆಡಳಿತಾತ್ಮಕ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಅವರನ್ನು ಅಮಾನತು ಮಾಡಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮ್ ಅರಸಿದ್ಧಿ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಕಳೆದ ಎರಡು ವರ್ಷಗಳಿಂದ ಮುನಿರಾಬಾದ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಸೇರಿದಂತೆ ಹಲವು ಅನಧಿಕೃತ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು. ಈ ಘಟನೆಗಳನ್ನು ಸಮರ್ಪಕವಾಗಿ ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಡಳಿತಾತ್ಮಕ ವೈಫಲ್ಯ ಆರೋಪದಡಿ ಅವರನ್ನು ಅಮಾನತು ಮಾಡಲಾಗಿದೆ.
ಈ ಕ್ರಮದಿಂದ ಇಲಾಖೆಯಲ್ಲಿ ಜವಾಬ್ದಾರಿತನವನ್ನು ಬಲಪಡಿಸುವ ಸಂದೇಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



