ಬೆಂಗಳೂರು: ಕೇತಗಾನಹಳ್ಳಿ ಅಕ್ರಮ ಭೂ ಒತ್ತುವರಿ ಆರೋಪ ಸಂಬಂಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.
ಪ್ರಕರಣದ ತುರ್ತು ವಿಚಾರಣೆಗೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಸಲ್ಲಿಸಿದ್ದ ತುರ್ತು ವಿಚಾರಣೆ ಅರ್ಜಿ ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಾಮಾನ್ಯ ವಿಚಾರಣೆಯ ಕ್ರಮದಲ್ಲೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದ ಸರ್ವೇ ಕಾರ್ಯಗಳ ನಂತರ ತುರ್ತು ವಿಚಾರಣೆಗಾಗಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಕುಮಾರಸ್ವಾಮಿ ಪರ ವಕೀಲರು ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಈ ವಾದವನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ತಕ್ಷಣದ ವಿಚಾರಣೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಇನ್ನೊಂದೆಡೆ, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದರು.
ಈ ತೀರ್ಪಿನಿಂದ ಕುಮಾರಸ್ವಾಮಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದೆ.



