ಬೆಂಗಳೂರು: SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಕೇವಲ ಗ್ರೇಡ್ ನೀಡುವುದರಿಂದ ಅದರ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿದೆ.
ಭಾಷಾ ವೈವಿಧ್ಯತೆ, ಜಾಗೃತಿ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ತೃತೀಯ ಭಾಷೆಯು ಮಹತ್ವದ ಪಾತ್ರ ವಹಿಸುತ್ತದೆ. ಆದ್ದರಿಂದ, ಈ ವಿಷಯದಲ್ಲಿ ಸೂಕ್ತ ಪರಿಶೀಲನೆ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಇದಲ್ಲದೆ, ಸರ್ಕಾರದ ಈ ನಿರ್ಧಾರ ವಿದ್ಯಾರ್ಥಿಗಳ ಕಲಿಕೆಯ ಆಸಕ್ತಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕ ಪೋಷಕರಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅಂಶಗಳನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇನ್ನೊಂದೆಡೆ, SSLC ಪರೀಕ್ಷೆಯಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕಪಟ್ಟಿಯಿಂದ ಹೊರಗಿಡಬೇಕು ಎಂದು ವಿವಿಧ ಕನ್ನಡ ಪರ ಸಂಘಟನೆಗಳು ಒತ್ತಾಯಿಸಿದ್ದವು. ಅದರ ಬೆನ್ನಲ್ಲೇ ಸರ್ಕಾರ SSLC ಪರೀಕ್ಷೆಯ ಒಟ್ಟು ಅಂಕಗಳನ್ನು 525ಕ್ಕೆ ನಿಗದಿ ಮಾಡಿ, ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶದಲ್ಲಿ ಪರಿಗಣಿಸದ ನಿರ್ಧಾರ ಕೈಗೊಂಡಿತ್ತು.
ಇನ್ನು ಮುಂದೆ ಹಿಂದಿ ಸೇರಿದಂತೆ ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ ಭಾಷೆಗಳ ಅಂಕಗಳನ್ನು ಗ್ರೇಡ್ ಮೂಲಕ ಮಾತ್ರ ನೀಡಲಾಗುತ್ತದೆ. ಆದರೆ ತೃತೀಯ ಭಾಷೆ ಪರೀಕ್ಷೆ ಬರೆಯುವುದು ಕಡ್ಡಾಯವಾಗಿರುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿತ್ತು. ಈ ನಿರ್ಧಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿರುವ ನಡುವೆ ರಾಜ್ಯಪಾಲರ ಈ ಪತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆತಿದೆ.



