ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟದಿಂದ ತತ್ತರಿಸಿ, ಸಿಕ್ಕ ಸಿಕ್ಕಲ್ಲಿ ಆದಾಯ ಸಂಗ್ರಹಿಸಲು ತುರ್ತು ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದರು.
ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ಹಣ ಸಂಗ್ರಹದ ನೀತಿ ಇದೀಗ ಎಲೆಕ್ಟ್ರಿಕ್ ವಾಹನಗಳ ಮೇಲೂ ಪರಿಣಾಮ ಬೀರಿದ್ದು, ಆತ್ಮನಿರ್ಭರ ಭಾರತದ ದೃಷ್ಟಿಕೋಣಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದರು.
ಜಾಗತಿಕ ಮಟ್ಟದಲ್ಲಿ ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮ ಗ್ಯಾಸ್, ಕಚ್ಚಾ ತೈಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಉಂಟಾಗುತ್ತಿರುವ ಸಂದರ್ಭದಲ್ಲಿ, ಭಾರತ ನವೀಕರಿಸಬಹುದಾದ ಇಂಧನ ಹಾಗೂ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ಈ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿದೆ ಎಂದು ಟೀಕಿಸಿದರು.
ಎಲೆಕ್ಟ್ರಿಕ್ ವಾಹನಗಳಿಗೆ ನೀಡಿದ್ದ ತೆರಿಗೆ ವಿನಾಯಿತಿಯನ್ನು ಹಿಂಪಡೆದಿರುವುದು ಪರಿಸರ ಸ್ನೇಹಿ ವಾಹನಗಳ ಬಳಕೆಯನ್ನು ಕುಗ್ಗಿಸಿ, ಜನರನ್ನು ಮತ್ತೆ ಪೆಟ್ರೋಲ್-ಡೀಸೆಲ್ ವಾಹನಗಳತ್ತ ತಳ್ಳುವ ನಿರ್ಧಾರವಾಗಿದೆ ಎಂದರು.
ಮೂರೂವರೆ ಲಕ್ಷ ಕೋಟಿ ರೂಪಾಯಿ ಬಜೆಟ್ ಹೊಂದಿರುವ ಸರ್ಕಾರ ಕೇವಲ 250 ಕೋಟಿ ರೂ. ಸಂಗ್ರಹಕ್ಕಾಗಿ ಇಂತಹ ನಿರ್ಧಾರ ಕೈಗೊಂಡಿರುವುದು ಆರ್ಥಿಕ ದಿವಾಳಿತನದ ಸಂಕೇತವಾಗಿದೆ ಎಂದು ಹೇಳಿದರು.
ಇನ್ನು, EV ವಾಹನಗಳಿಗೆ ಲೈಫ್‌ಟೈಮ್ ಟ್ಯಾಕ್ಸ್ ವಿಧಿಸುವ ಮೂಲಕ ಸರ್ಕಾರ ಹೆಚ್ಚುವರಿ ಆದಾಯ ಗಳಿಸಲು ಮುಂದಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ತೆರಿಗೆಗಳಿಂದ ಕಮರ್ಷಿಯಲ್ ಟ್ಯಾಕ್ಸ್ ಹೆಚ್ಚಿಸುವ ಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಭಾರತ 2030ರೊಳಗೆ ಇಂಗಾಲ ಉತ್ಸವವನ್ನು 50% ಕಡಿಮೆ ಮಾಡುವ ಗುರಿ ಹೊಂದಿದ್ದರೂ, ರಾಜ್ಯ ಸರ್ಕಾರದ ನೀತಿಗಳು ಅದಕ್ಕೆ ವಿರುದ್ಧವಾಗಿವೆ ಎಂದು ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.



