ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುತ್ತಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆಯ ಪ್ರಕಾರ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಸೇರಿದಂತೆ ಒಟ್ಟು 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ವಿಜಯಪುರ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉಳಿದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.



