210 ರನ್ ಗಳ ಬೃಹತ್ ಗುರಿ ಬೆನ್ನಟ್ಟಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದರೂ ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ ವಿಧಿಸಲಾಗಿದೆ.
ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಪ್ಲೇಯಿಂಗ್ ಇಲೆವೆನ್ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಶುಕ್ರವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು, ಹೀಗಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಇದೀಗ ಮತ್ತದೇ ತಪ್ಪು ಪುನರಾವರ್ತಿಸಿದ ಕಾರಣ 24 ಲಕ್ಷ ರೂ. ದಂಡ ವಿಧಿಸಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನಲ್ಲಿದ್ದ (ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ) ಪ್ರತಿಯೊಬ್ಬ ಆಟಗಾರನಿಗೂ 6 ಲಕ್ಷ ರೂಪಾಯಿ ಅಥವಾ ಅವರ ಪಂದ್ಯದ ಸಂಭಾವನೆಯ 25% ರಷ್ಟು ದಂಡ ಹಾಕಲಾಗಿದೆ.



