ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಫಲಿತಾಂಶ ಪ್ರಕಟಣೆ ಮುಂದೂಡಲ್ಪಟ್ಟಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ಕೆಲವು ತಾಂತ್ರಿಕ ಅಡಚಣೆಗಳಿಂದ ಪ್ರಕಟಣೆ ವಿಳಂಬವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೀಗ ಲಭ್ಯವಾಗಿರುವ ಹೊಸ ಮಾಹಿತಿಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 9ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದು, ಸುಮಾರು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಮೊದಲಿಗೆ ಏಪ್ರಿಲ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದ್ದರೂ, ಅಧಿಕೃತ ಘೋಷಣೆ ಆಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿತ್ತು.
ಇನ್ನೂ ಫಲಿತಾಂಶ ಆನ್‌ಲೈನ್‌ನಲ್ಲಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ಪರಿಶೀಲಿಸಬಹುದು.
ಇದಲ್ಲದೆ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ರಾಜ್ಯದ ಕೆಲವು ಭಾಗಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದರ ಪರಿಣಾಮವಾಗಿ ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದ ಅನುಮತಿ ಅಗತ್ಯವಿದ್ದು, ಇದೇ ಕಾರಣದಿಂದ ಪ್ರಕಟಣೆ ವಿಳಂಬವಾಗಿದೆ ಎಂದು ತಿಳಿದುಬಂದಿದೆ.



