ಬೆಂಗಳೂರು: ದೈವಕ್ಕೆ ಅಪಮಾನ ಮಾಡಿದ ಆರೋಪ ಸಂಬಂಧ ನಟ ರಣವೀರ್ ಸಿಂಗ್ ಅವರಿಗೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಕಾಂತಾರ ಚಿತ್ರದ ದೈವ ಸಂಪ್ರದಾಯವನ್ನು ಅಪಹಾಸ್ಯ ಮಾಡಿದ ಆರೋಪದಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಪ್ರಕರಣದಲ್ಲಿ, ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಪಡಿಸುವಂತೆ ರಣವೀರ್ ಸಿಂಗ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ನಡೆಯಿತು.
ವಿಚಾರಣೆ ವೇಳೆ ದೂರುದಾರರ ಪರ ವಕೀಲರು, ರಣವೀರ್ ಸಿಂಗ್ ಮನಸಾರೆ ಕ್ಷಮೆ ಕೋರಿಲ್ಲ ಎಂದು ವಾದಿಸಿದರು. ಇದಕ್ಕೆ ಪ್ರತಿಯಾಗಿ ರಣವೀರ್ ಪರ ವಕೀಲರು, ಈಗಾಗಲೇ ಬೇಷರತ್ ಕ್ಷಮೆ ಕೋರಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಅಗತ್ಯವಿದ್ದರೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ಸಿದ್ಧವಿದ್ದೇವೆ ಎಂದು ಹೇಳಿದರು.
ಇದನ್ನು ಪರಿಗಣಿಸಿದ ನ್ಯಾಯಾಲಯ, ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ಸೂಚನೆ ನೀಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿದೆ.



