ನವದೆಹಲಿ: ಮಹಿಳಾ ಮೀಸಲಾತಿ ಸಂಬಂಧಿತ ನಾರಿ ಶಕ್ತಿ ವಂದನಾ ಕಾಯ್ದೆ ತಿದ್ದುಪಡಿ ಕುರಿತು ಸಂಪೂರ್ಣ ಬೆಂಬಲ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಹಾಗೂ ರಾಜ್ಯಸಭೆಯ ಎಲ್ಲಾ ಸಂಸದೀಯ ಪಕ್ಷಗಳ ನಾಯಕರಿಗೆ ಪತ್ರ ಬರೆದಿದ್ದಾರೆ.
ಈ ಪತ್ರದಲ್ಲಿ ಪ್ರಧಾನಿ ಮೋದಿ ಅವರು ಏಪ್ರಿಲ್ 16ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಐತಿಹಾಸಿಕ ತಿದ್ದುಪಡಿಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಮಹಿಳಾ ಪ್ರತಿನಿಧಿತ್ವವನ್ನು ಹೆಚ್ಚಿಸುವುದು ದೇಶದ ಪ್ರಗತಿಗೆ ಅತ್ಯಗತ್ಯ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಏಪ್ರಿಲ್ 16, 17 ಹಾಗೂ 18ರಂದು ಸದನದಲ್ಲಿ ಹಾಜರಿರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ಜಾರಿಗೆ ತರುವ ಈ ಕ್ರಮವು 2029ರ ಲೋಕಸಭೆ ಚುನಾವಣೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗಳಲ್ಲಿ ಪರಿಣಾಮಕಾರಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮಹಿಳಾ ಶಕ್ತಿ ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸುತ್ತಿದೆ ಎಂದು ಹೇಳಿರುವ ಪ್ರಧಾನಿ ಮೋದಿ, ಈ ತಿದ್ದುಪಡಿ ಭಾರತದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಐತಿಹಾಸಿಕ ಹೆಜ್ಜೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.



