ಮಡಿಕೇರಿ: ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಲೋಕಕ್ಕೆ ಮತ್ತೊಂದು ದುಃಖದ ಸುದ್ದಿ ಲಭಿಸಿದೆ. ಸಹ ಕಲಾವಿದ ಹರೀಶ್ (40) ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅಪಘಾತ ಸಂಭವಿಸಿದೆ. ಕೆಲಸ ಮುಗಿಸಿ ತಮ್ಮ ಸ್ವಗ್ರಾಮ ಹೊಸಕೋಟೆ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಹರೀಶ್ ಅವರು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಹಾಗೂ ಜನಪ್ರಿಯ ಕಿರುತೆರೆ ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದರು. ಬಹುಮುಖ ಪ್ರತಿಭೆ ಹೊಂದಿದ್ದ ಅವರು ಚಿತ್ರರಂಗದಲ್ಲಿ ತಮ್ಮದೇ ಸ್ಥಾನ ನಿರ್ಮಿಸಿಕೊಂಡಿದ್ದರು.
ಅವರ ಅಕಾಲಿಕ ನಿಧನದಿಂದ ಕಲಾ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.



