ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಭ ಸುದ್ದಿ ನೀಡಿದೆ.
ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಮಂಡಳಿ ಆದೇಶ ಹೊರಡಿಸಿದೆ. ಮೊದಲು ಏಪ್ರಿಲ್ 17 ಕೊನೆಯ ದಿನವಾಗಿದ್ದರೂ, ತಾಂತ್ರಿಕ ದೋಷಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅರ್ಜಿ ಪ್ರಕ್ರಿಯೆಯಲ್ಲಿ ಉಂಟಾದ ಅಡಚಣೆಗಳನ್ನು ಗಮನದಲ್ಲಿಟ್ಟುಕೊಂಡು ಒಂದು ದಿನದ ಮಟ್ಟಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಇನ್ನೂ ಅರ್ಜಿ ಸಲ್ಲಿಸದವರು ತಕ್ಷಣವೇ ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.
ಸುತ್ತೋಲೆಯಲ್ಲಿ ಏನಿದೆ?
2026ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಹಾಗೂ ಫಲಿತಾಂಶ ಸುಧಾರಿಸಿಕೊಳ್ಳುವ ಅಭ್ಯರ್ಥಿಗಳಿಗೆ ಏಪ್ರಿಲ್ 9ರಿಂದ 17ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆನ್‌ಲೈನ್ ಹಾಗೂ ಕಾಲೇಜುಗಳ ಮೂಲಕ ಭೌತಿಕವಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇತ್ತು.
ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸಿ ಇದೀಗ ಅಂತಿಮ ದಿನಾಂಕವನ್ನು ಏಪ್ರಿಲ್ 18ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.



