ಬೆಂಗಳೂರು:- ದಾಬಸ್ಪೇಟೆ ಬಳಿ ಕಾರು ಓವರ್ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಅಶುತೋಷ್ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸದಿದ್ದರೂ ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ ಎಂಬುದನ್ನು ಪ್ರಶ್ನಿಸಿ, ಅವರ ಪರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಾಸ್ಪೋರ್ಟ್ ಪಡೆಯಲು ತೊಂದರೆ ಉಂಟಾಗುತ್ತಿದೆ ಎಂದು ವಕೀಲರು ವಾದ ಮಂಡಿಸಿದ್ದರು.
ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ.
ಘಟನೆಯ ದಿನ ಅಶುತೋಷ್ ಹಿಂಬದಿ ಸೀಟಿನಲ್ಲಿ ಇದ್ದರು, ನೇರವಾಗಿ ಘಟನೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಲಾಗಿದ್ದು, ತನಿಖೆಯಲ್ಲೂ ಅವರ ನೇರ ಭಾಗವಹಿಸುವಿಕೆ ಉಲ್ಲೇಖವಿಲ್ಲ ಎಂದು ನ್ಯಾಯಾಲಯದ ಮುಂದೆ ತಿಳಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರತಿಕ್ರಿಯೆಯೂ ಗಮನ ಸೆಳೆದಿದೆ.



