ಜೈಪುರ್: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ವಜಾಗೊಂಡ ರಾಜಸ್ಥಾನ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಭೂಪೇಂದ್ರ ಸಿಂಗ್ ಯಾದವ್ಗೆ ದೌಸಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ನ್ಯಾಯಾಲಯವು ಆರೋಪಿಗೆ 2 ಲಕ್ಷ ರೂ. ದಂಡ ವಿಧಿಸಿದ್ದು, ಆ ಮೊತ್ತವನ್ನು ಸಂತ್ರಸ್ತೆಗೆ ನೀಡಲು ಆದೇಶಿಸಿದೆ. ಜೊತೆಗೆ ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಶಿಫಾರಸು ಮಾಡಿದೆ.
2023ರಲ್ಲಿ ರಾಹುವಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿತ್ತು. ಆ ಸಂದರ್ಭದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಭೂಪೇಂದ್ರ ಸಿಂಗ್ ಯಾದವ್, ಬಾಲಕಿಗೆ ಕ್ಯಾಂಡಿ ಕೊಡಿಸುವುದಾಗಿ ಹೇಳಿ ತನ್ನ ಕೊಠಡಿಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.
ಘಟನೆ ಬೆಳಕಿಗೆ ಬಂದ ತಕ್ಷಣ, ಕುಟುಂಬದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ನಂತರ ಪೊಲೀಸ್ ಇಲಾಖೆ ಕೂಡ ಅವನನ್ನು ಸೇವೆಯಿಂದ ವಜಾಗೊಳಿಸಿತು. ತ್ವರಿತವಾಗಿ ತನಿಖೆ ಪೂರ್ಣಗೊಳಿಸಿ ಪೋಕ್ಸೊ ಕಾಯ್ದೆಯಡಿ ಆರೋಪಪಟ್ಟಿ ಸಲ್ಲಿಸಲಾಯಿತು.
ವಿಚಾರಣೆ ವೇಳೆ ಸಂತ್ರಸ್ತೆ ಪರವಾಗಿ 33 ಸಾಕ್ಷಿಗಳು ಹಾಗೂ 46 ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಾಧೀಶೆ ರೇಖಾ ರಾಥೋಡ್ ಅವರು ಆರೋಪಿಯನ್ನು ತಪ್ಪಿತಸ್ಥ ಎಂದು ಘೋಷಿಸಿದರು.
ಶಿಕ್ಷೆ ಪ್ರಕಟವಾದ ಬಳಿಕ, ಯಾದವ್ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದು, ತೀರ್ಪು ವಿರುದ್ಧ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ವಿಶೇಷ ಸಾರ್ವಜನಿಕ ಅಭಿಯೋಜಕ ಜಿತೇಂದ್ರ ಕುಮಾರ್ ಸೈನಿ ಈ ಪ್ರಕರಣವನ್ನು ಅತ್ಯಂತ ಗಂಭೀರ ಮತ್ತು ಮನಕಲಕುವ ಘಟನೆ ಎಂದು ವಿವರಿಸಿದ್ದಾರೆ.



