ಮೈಸೂರು: ರಾಜ್ಯ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಿವಿಯಲ್ಲಿ ಕೇಳಿದ ಪ್ರಶ್ನೆಯ ಗುಟ್ಟನ್ನು ಸಿಎಂ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ, ಮಹಿಳಾ ಮೀಸಲಾತಿ ಕುರಿತಾಗಿ ನಿಮ್ಮ ನಿಲುವು ಏನು ಎಂದು ಪ್ರಧಾನಿ ಮೋದಿ ಕಿವಿಯಲ್ಲಿ ಕೇಳಿದ್ದರು ಎಂದು ತಿಳಿಸಿದ್ದಾರೆ. ಅದಕ್ಕೆ ತಾವು ಮಹಿಳಾ ಮೀಸಲಾತಿಗೆ ಬೆಂಬಲವಾಗಿದ್ದೇನೆ ಎಂದು ಉತ್ತರ ನೀಡಿದ್ದಾಗಿ ಹೇಳಿದ್ದಾರೆ.
ಇದೇ ವೇಳೆ ಇಡಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಂಚರಾಜ್ಯ ಚುನಾವಣೆ ಕುರಿತು ಮಾತನಾಡಿದ ಅವರು, ತಮಿಳುನಾಡಿನಲ್ಲಿ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ತಿಳಿಸಿ, ಅಲ್ಲಿ ಡಿಎಂಕೆ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಿದರು.
ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಮೊದಲು ವಿರೋಧಿಸಿ ಈಗ ಅದನ್ನೇ ಅನುಸರಿಸುತ್ತಿದೆ ಎಂದು ಟೀಕಿಸಿದರು. ಮಹಿಳಾ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ವಿರೋಧದಲ್ಲಿಲ್ಲ, ಆದರೆ ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಮಾತ್ರ ತಕರಾರು ಇದೆ ಎಂದು ಸ್ಪಷ್ಟಪಡಿಸಿದರು.
ಮಹಿಳಾ ಮೀಸಲಾತಿ ವಿಚಾರವನ್ನು ಬಿಜೆಪಿ ರಾಜಕೀಯವಾಗಿ ಬಳಸುತ್ತಿದೆ, ಆದರೆ ಅದನ್ನು ಜಾರಿಗೆ ತರುವ ಬದ್ಧತೆ ಕಾಣುತ್ತಿಲ್ಲ ಎಂದು ಆರೋಪಿಸಿದ ಸಿಎಂ, 2023ರಲ್ಲೇ ವಿಧೇಯಕ ಜಾರಿಗೆ ತರಬಹುದಾಗಿದ್ದರೂ ಯಾಕೆ ವಿಳಂಬ ಮಾಡಿದರು ಎಂದು ಪ್ರಶ್ನಿಸಿದರು.
ಹೊಸ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆ ಅಗತ್ಯವಿದೆ ಎಂದು ಒತ್ತಿ ಹೇಳಿದ ಅವರು, ಹಳೆಯ ಜನಗಣತಿ ಆಧಾರವಾಗಿದ್ದರೆ ಕರ್ನಾಟಕಕ್ಕೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಉತ್ತರ ಭಾರತದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ಮಾಡದೇ ಇದ್ದರೆ, ದಕ್ಷಿಣ ರಾಜ್ಯಗಳಿಗೆ ನಷ್ಟವಾಗಬಾರದು ಎಂಬುದು ನಮ್ಮ ನಿಲುವು ಎಂದು ಹೇಳಿದ್ದಾರೆ.



