ಯಾದಗಿರಿ: ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವು ಖಾಸಗಿ ಕೋಚಿಂಗ್ ಕೇಂದ್ರವಾಗಿ ಬಳಸಲಾಗುತ್ತಿರುವ ಅಕ್ರಮ ಬೆಳಕಿಗೆ ಬಂದಿದೆ. ಲಿಂಗೇರಿ ಸ್ಟೇಷನ್ ಸಮೀಪದ ಈ ಹಾಸ್ಟೆಲ್ ಕಟ್ಟಡದಲ್ಲಿ ದೇವಿಂದ್ರಪ್ಪ ಎಂಬಾತ ಅಕ್ರಮವಾಗಿ ತರಬೇತಿ ಕೇಂದ್ರ ಆರಂಭಿಸಿರುವ ಆರೋಪ ಕೇಳಿಬಂದಿದೆ.
ಬೇಸಿಗೆ ಶಿಬಿರದ ಹೆಸರಿನಲ್ಲಿ ನಡೆಯುತ್ತಿರುವ ಈ ಚಟುವಟಿಕೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದು, ಪ್ರತಿ ವಿದ್ಯಾರ್ಥಿಯಿಂದ ತಿಂಗಳಿಗೆ 5 ಸಾವಿರ ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿದೆ. ಹಾಸ್ಟೆಲ್ ವಿದ್ಯಾರ್ಥಿಗಳ ಜೊತೆಗೆ ಹೊರಗಿನ ಮಕ್ಕಳಿಗೂ ಅವಕಾಶ ನೀಡಲಾಗಿದ್ದು, ರಾತ್ರಿ ವೇಳೆ ಹಾಸ್ಟೆಲ್ ಕೊಠಡಿಗಳಲ್ಲೇ ವಾಸ ಮಾಡುವಂತೆ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಉಮೇಶ್ ಹಾಗೂ ಸ್ಥಳೀಯ ನಾಗರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರಿ ಆಸ್ತಿಯ ದುರುಪಯೋಗದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.



