ತಿರುವನಂತಪುರಂ: ಕೇರಳದ ತ್ರಿಶೂರ್‌ನಲ್ಲಿ ನಡೆಯುತ್ತಿರುವ ಪ್ರಸಿದ್ಧ ʻತ್ರಿಶೂರ್ ಪೂರಂ ಉತ್ಸವʼಕ್ಕಾಗಿ ಪಟಾಕಿ ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಮಂಗಳವಾರ (ಏ.21) ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ದೃಢಪಡಿಸಿದೆ.
ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಾಹಿತಿಯ ಪ್ರಕಾರ, ಉತ್ಸವದ ಹಿನ್ನೆಲೆಯಲ್ಲಿ ಪಟಾಕಿ ತಯಾರಿಕಾ ಕಾರ್ಯಗಳು ನಡೆಯುತ್ತಿದ್ದಾಗ ಮಧ್ಯಾಹ್ನ ಸುಮಾರು 3:30ರ ವೇಳೆಗೆ ಕಾರ್ಖಾನೆಯ ಶೆಡ್‌ನಲ್ಲಿ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ. ಸ್ಫೋಟದ ಬಳಿಕ ಒಂದರ ನಂತರ ಒಂದರಂತೆ ಮತ್ತಷ್ಟು ಸ್ಫೋಟಗಳು ಸಂಭವಿಸಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಘಟನೆಯ ಸಮಯದಲ್ಲಿ ಕಾರ್ಖಾನೆಯಲ್ಲಿ 40ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಕ್ಷಣಾ ತಂಡಗಳು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಪರಿಸ್ಥಿತಿಯನ್ನು ನಿಗಾ ವಹಿಸಿ ನಿರಂತರ ಮಾಹಿತಿ ನೀಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
ಇದೇ ವೇಳೆ, ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಚೇರಿ ಕೂಡ ಸಂತಾಪ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು, ಪಟಾಕಿ ಕಾರ್ಖಾನೆಗಳ ಸುರಕ್ಷತಾ ನಿಯಮಗಳ ಕುರಿತು ಮತ್ತೆ ಚರ್ಚೆ ಆರಂಭವಾಗಿದೆ.



